Ad
GREEN VALLEY INTERNATIONAL SCHOOL
ರಾಜ್ಯ

ನೀಟ್ ಹಗರಣ ಹಾಗೂ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡಿಸಿ ಜುಲೈ 30ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ: ಪ್ರಗತಿಪರ ಸಂಘಟನೆಗಳ ಘೋಷಣೆ

ವಿಜಯಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ, ನೀಟ್ ಹಗರಣ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಜುಲೈ 30ರಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದಾಗಿ ಘೋಷಿಸಲಾಯಿತು.

ನಮಸ್ತೆ ಕರ್ನಾಟಕ ಡೆಸ್ಕ್
25/7/2026 · 24 views
ವಿಜಯಪುರ, ಜುಲೈ 25:ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ, ನೀಟ್ ಹಗರಣ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಜುಲೈ 30ರಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದಾಗಿ ಘೋಷಿಸಲಾಯಿತು. ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಮಾತನಾಡಿ, ದೇಶದ ಯುವಕರ ಭವಿಷ್ಯದೊಂದಿಗೆ ಚಲ್ಲಾಟ ಆಡುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ, ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. ಹಿರಿಯ ಮುಖಂಡ ಅನಿಲ ಹೊಸಮನಿ ಮಾತನಾಡಿ, ಪ್ರಗತಿಪರ ಚಿಂತಕ ಸೋನಂ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹ ಮತ್ತು ಬಂಧನದ ನಂತರ ವಿದ್ಯಾರ್ಥಿಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿದರು. ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಹಿರಿಯ ರೈತ ಮುಖಂಡ ಅರವಿಂದ್ ಕುಲಕರ್ಣಿ ಮಾತನಾಡಿ, ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಅವರನ್ನು ಬಂಧಿಸಿರುವುದು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಬಲಪ್ರಯೋಗ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ ಮಾತನಾಡಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೇ ಇರುವುದನ್ನು ಪ್ರಶ್ನಿಸಿ, ಕೇಂದ್ರ ಸರ್ಕಾರ ಕೂಡಲೇ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರಗತಿಪರ ಮುಖಂಡ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಇದೇ ವಿಚಾರವಾಗಿ ಜುಲೈ 18ರಂದು ಸಂಕೇತಿಕ ಧರಣಿ ನಡೆಸಲಾಗಿದ್ದರೂ ಸರ್ಕಾರ ಯಾವುದೇ ಸ್ಪಂದನೆ ನೀಡದ ಕಾರಣ, ಇದೀಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಚಂದ್ರಶೇಖರ ಗಂಟೆಪ್ಪಗೋಳ, ಲಕ್ಷ್ಮಣ ಹಂದ್ರಾಳ, ಚೆನ್ನು ಕಟ್ಟಿಮನಿ, ಅಕ್ರಮ ಮಾಶಾಳಕರ, ಮಾರುತಿ ಕುದರಿ, ಅಕ್ಷಯ ಅಜಮನಿ, ಶ್ರೀನಾಥ್ ಪೂಜಾರಿ, ವೈ.ಎನ್. ಗುಣಕಿ ಹಾಗೂ ಸೋಮಲಿಂಗ ರಣದೇವಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Ad
ಸಂಪಾದಕರು

ಕಾಮೆಂಟ್‌ಗಳು (0)

ಕಾಮೆಂಟ್ ಮಾಡಲು ಲಾಗಿನ್ ಮಾಡಿ.

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ!