ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸಬೇಡಿ; ನಿಮ್ಮ ಜೀವ ನಿಮ್ಮ ಕೈಯಲ್ಲಿದೆ: ಡಾ. ಎಸ್.ಎಲ್. ಪಾಟೀಲ್
ಮುದ್ದೇಬಿಹಾಳದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸಂಚರಿಸುವಂತೆ ಜಾಗೃತಿ ಮೂಡಿಸಲು ಮಾದರಿ ಪ.ಜಾ. ಮತ್ತು ಪ.ಪಂ. ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು, ಅಜೀಂ ಪ್ರೇಮ್ಜಿ ಫೌಂಡೇಶನ್ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಯಿತು. ವಿದ್ಯಾರ್ಥಿಗಳು ಜಾಥಾ ನಡೆಸಿ, ಹೆಲ್ಮೆಟ್ ಧರಿಸದ ಸವಾರರಿಗೆ ಗುಲಾಬಿ ಹೂ ನೀಡಿ ಸುರಕ್ಷತಾ ನಿಯಮ ಪಾಲಿಸುವಂತೆ ಮನವಿ ಮಾಡಿದರು.
ನ
ನಮಸ್ತೆ ಕರ್ನಾಟಕ ಡೆಸ್ಕ್
8/9/2026 · 56 views

Ad

ಮುದ್ದೇಬಿಹಾಳ ಸೇ 08: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಅಮೂಲ್ಯ ಜೀವವನ್ನು ಸುರಕ್ಷಿತವಾಗಿರಿಸಿಕೊಳ್ಳಬೇಕು ಎಂದು ಮಾದರಿ ಪ.ಜಾತಿ ಮತ್ತು ಪ.ಪಂಗಡ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಎಲ್. ಪಾಟೀಲ್ ಹೇಳಿದರು.
ಮುದ್ದೇಬಿಹಾಳ ಪಟ್ಟಣದ ಮಾದರಿ ಪ.ಜಾ. ಮತ್ತು ಪ.ಪಂ. ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು, ಹಡಲಗೇರಿ, ಅಜೀಂ ಪ್ರೇಮ್ಜಿ ಫೌಂಡೇಶನ್ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹೆಲ್ಮೆಟ್ ಜಾಗೃತಿ ಅಭಿಯಾನ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದ್ವಿಚಕ್ರ ವಾಹನ ಸವಾರರ ಸುರಕ್ಷತೆಯಲ್ಲಿ ಹೆಲ್ಮೆಟ್ ಪ್ರಮುಖ ಪಾತ್ರ ವಹಿಸುತ್ತದೆ. ರಸ್ತೆ ಅಪಘಾತಗಳ ಸಂದರ್ಭದಲ್ಲಿ ಹೆಲ್ಮೆಟ್ ತಲೆಗೆ ಗಂಭೀರ ಗಾಯವಾಗುವುದನ್ನು ತಡೆಯುವಲ್ಲಿ ಸಹಕಾರಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಅವರು ತಿಳಿಸಿದರು.
ಸಹಾಯಕ ಪ್ರಾಧ್ಯಾಪಕ ರವಿ ಕಟ್ಟಿಮನಿ ಮಾತನಾಡಿ, “ದ್ವಿಚಕ್ರ ವಾಹನ ಸುರಕ್ಷತೆ ಹೆಲ್ಮೆಟ್ ಧರಿಸುವುದರಿಂದಲೇ ಪ್ರಾರಂಭವಾಗುತ್ತದೆ. ಹೆಲ್ಮೆಟ್ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುಟುಂಬದ ಸಂತೋಷವು ಸುರಕ್ಷಿತ ವಾಹನ ಚಾಲನೆಯಲ್ಲಿದೆ,” ಎಂದು ಹೇಳಿದರು.
ಅಜೀಂ ಪ್ರೇಮ್ಜಿ ಫೌಂಡೇಶನ್ ಮುದ್ದೇಬಿಹಾಳ ತಂಡದ ಸದಸ್ಯ ಎಂ. ಎಸ್. ಆದಿಮನಿ ಮಾತನಾಡಿ, ವಿಶ್ವದಾದ್ಯಂತ ಪ್ರತಿವರ್ಷ ಸುಮಾರು 1.2 ಮಿಲಿಯನ್ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, ಲಕ್ಷಾಂತರ ಜನರು ಗಾಯಗೊಂಡು ಅಂಗವಿಕಲರಾಗುತ್ತಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ನಂತರ ಕಾಲೇಜಿನ ವಿದ್ಯಾರ್ಥಿಗಳು ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಜಾಗೃತಿ ಜಾಥಾ ನಡೆಸಿದರು. ಜಾಥಾದ ವೇಳೆ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ, ಇನ್ನು ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೆಲ್ಮೆಟ್ ಧರಿಸುವ ಮಹತ್ವ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಎ ಎಸ್ ಐ.ಎ.ಬಿ. ಟಕ್ಕಳಕಿ, ಹವಾಲ್ದಾರ್ ಬಿಜ್ಜುರ, ರಾಜೇಶ್ ಮಾಂತಮಠ, ಮಂಜುನಾಥ್ ಗೊಣ್ಣಾಗರ್, ಶಿವಪ್ರಕಾಶ್, ಬಸವರಾಜ್, ಗುರುಪ್ರಸಾದ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Ad

ಕಾಮೆಂಟ್ಗಳು (0)
ಕಾಮೆಂಟ್ ಮಾಡಲು ಲಾಗಿನ್ ಮಾಡಿ.
ಇನ್ನೂ ಯಾವುದೇ ಕಾಮೆಂಟ್ಗಳಿಲ್ಲ. ಮೊದಲಿಗರಾಗಿ!

