Ad
ಪೌರಕಾರ್ಮಿಕರ ದಿನಾಚರಣೆ ಶುಭಾಶಯಗಳು
ರಾಜ್ಯ

ಬರ ಘೋಷಣೆಗೆ ಸರ್ಕಾರದ ನಿರ್ಲಕ್ಷ್ಯ ಆರೋಪ: ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿರುವ ಸರ್ಕಾರದ ನಿಲುವನ್ನು ಖಂಡಿಸಿ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರೈತರ ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ ಹಾಗೂ ಹಲವು ಬಾರಿ ಮನವಿ ಮಾಡಿದರೂ ಸರ್ಕಾರ ಸ್ಪಂದಿಸದಿರುವುದನ್ನು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ನ
ನಮಸ್ತೆ ಕರ್ನಾಟಕ ಡೆಸ್ಕ್
9 ನಿಮಿಷಗಳ ಹಿಂದೆ · 6 views
Ad
https://cdn.phototourl.com/free/2026-08-28-22d04d2f-c690-46d3-8a0d-161e4b1f60b4.jpg
ವಿಜಯಪುರ ಸೇ 23: ಬರ ಪೀಡಿತ ತಾಲೂಕು ಘೋಷಣೆಯಲ್ಲಿ ಸರ್ಕಾರದ ನಿಲುವನ್ನು ಖಂಡಿಸಿ ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕು 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಬರಗಾಲಕ್ಕೆ ತುತ್ತಾಗಿದೆ. ಆರಂಭದಲ್ಲಿ ಸ್ವಲ್ಪ ಮಳೆ ಬಿದ್ದ ಪ್ರಯುಕ್ತ ರೈತರು ಸಾಲ ಮಾಡಿ ಬೀಜ, ಗೊಬ್ಬರಗಳನ್ನು ಖರೀದಿಸಿ ಬಿತ್ತನೆ ಮಾಡಿದ್ದರು. ಆದರೆ, ಸಕಾಲಕ್ಕೆ ಮಳೆಯಾಗದ ಕಾರಣ ಬೆಳೆಗಳು ಬತ್ತಿಹೋಗಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ. ಆಗಸ್ಟ್ 28ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ಇಂಡಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಕೋರಲಾಗಿತ್ತು. ಆದರೆ, ವಿಜಯಪುರ ಜಿಲ್ಲೆಯ ಒಟ್ಟು 13 ತಾಲೂಕುಗಳ ಪೈಕಿ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಹೊರತುಪಡಿಸಿ, ಇದುವರೆಗೆ ರಾಜ್ಯದ 188 ತಾಲೂಕುಗಳನ್ನು ಮಾತ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಡಳಿತ ಪಕ್ಷದ ಶಾಸಕರಾಗಿದ್ದರೂ, ಸರ್ಕಾರದ ಮುಜುಗರ ತಪ್ಪಿಸಲು ಸೂಕ್ಷ್ಮಮತಿಯಾಗಿ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೂ ಸಹ ನಮ್ಮ ಮಾತಿಗೆ ಹಾಗೂ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದ್ದು, ಇಂದಿನ ರಾಜಕೀಯ ವಾತಾವರಣದಲ್ಲಿ ಬಲಾಢ್ಯರಿಗೆ ಮತ್ತು ಒತ್ತಡ ತಂತ್ರಗಳನ್ನು ಹೆಣೆಯುವವರಿಗೆ ಮನ್ನಣೆ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಪ್ರಯುಕ್ತ ತಾವು ಸ್ವ-ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿರುವ ಅವರು, ದಯವಿಟ್ಟು ಇದನ್ನು ಅಂಗೀಕರಿಸಿ ಎಂದು ವಿಧಾನಸಭಾ ಸ್ಪೀಕರ್ ಜಿ.ಎಸ್. ಪಾಟೀಲ್ ಅವರಿಗೆ ಪತ್ರದ ಮೂಲಕ ಕೋರಿದ್ದಾರೆ. ಈ ಹಿಂದೆ ಸಚಿವ ಸ್ಥಾನದ ವಿಚಾರವಾಗಿಯೂ ಅವರು ರಾಜೀನಾಮೆ ನೀಡಿದ್ದು, ಪಕ್ಷದ ಹಿರಿಯ ನಾಯಕರ ಮನವೊಲಿಕೆಯ ನಂತರ ಅದನ್ನು ಹಿಂಪಡೆದಿದ್ದರು.
Ad
ಸಂಪಾದಕರು

ಕಾಮೆಂಟ್‌ಗಳು (0)

ಕಾಮೆಂಟ್ ಮಾಡಲು ಲಾಗಿನ್ ಮಾಡಿ.

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ!